ಸಿಎಂ ಆಗಮನಕ್ಕೆ ಭರದ ಸಿದ್ಧತೆ: ಡಿಸಿ ಭೇಟಿ

ಪಟ್ಟಣ

ಸುದ್ದಿ ಸಂಗ್ರಹ ಚಿತ್ತಾಪುರ
ಪಟ್ಟಣಕ್ಕೆ ರವಿವಾರ ಸಿಎಂ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತದಿಂದ ಭರದ ಸಿದ್ಧತೆ ನಡೆದಿದೆ. ಅಧಿಕಾರಿಗಳು ಚಿತ್ತಾಪುರದಲ್ಲಿ ಬೀಡುಬಿಟ್ಟಿದ್ದು, ವೇದಿಕೆ ನಿರ್ಮಾಣ ಸೇರಿದಂತೆ ಭದ್ರತೆ ಕಾರ್ಯಗಳಿಗೆ ಪ್ರಮುಖ ಆದ್ಯತೆ ನೀಡಿದ್ದಾರೆ. ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಹಾಗೂ ಜಿ.ಪಂ ಸಿಇಒ ಭಂವರಸಿಂಗ್ ಮೀನಾ ಕಾರ್ಯಕ್ರಮ ನಡೆಯುವ ಸ್ಥಳ ಪರಿಶೀಲನೆ ನಡೆಸಿದರು.

ಚಿತ್ತಾಪುರ ಪಟ್ಟಣದ ಹೊರವಲಯದಲ್ಲಿ ವೇದಿಕೆ ಸಿದ್ದಗೊಳ್ಳುತ್ತಿದ್ದು, ಅಗತ್ಯ ಹಾಗೂ ಸೂಕ್ತ ತಯಾರಿ ನಡೆಸುವಂತೆ ಜಿಲ್ಲಾಧಿಕಾರಿ ಅಧಿಕಾರಿಗಳಿಗೆ ಸೂಚಿಸಿದರು.

ಪಟ್ಟಣದ ಪ್ರಜಾಸೌಧದಲ್ಲಿ‌ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಜಿಲ್ಲಾಧಿಕಾರಿ, ಮುಖ್ಯಮಂತ್ರಿ, ಎಐಸಿಸಿ ಅಧ್ಯಕ್ಷರು, ಡಿಸಿಎಂ, ಸಚಿವರು ಸೇರಿದಂತೆ ಇತರ ಗಣ್ಯರು ಭಾಗವಹಿಸುತ್ತಿರುವ ಹಿನ್ನೆಲೆಯಲ್ಲಿ ಎಲ್ಲಿಯೂ ಲೋಪವಾಗದಂತೆ ಎಚ್ಚರಿಕೆ ವಹಿಸಬೇಕು, ಅಗತ್ಯ ಹಾಗೂ ಕಟ್ಟುನಿಟ್ಟಿನ ಬಂದೋಬಸ್ತ್ ಒದಗಿಸುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದರು.

ಸಾರ್ವಜನಿಕರಿಗಾಗಿ ಅಳವಡಿಸುವ ಆಸನಗಳು, ಕುಡಿಯುವ ನೀರು, ಊಟ ಉಪಚಾರ ಸೇರಿದಂತೆ ವಾಹನಗಳ ನಿಲುಗಡೆಗೆ ಆಚ್ಚುಕಟ್ಟಾಗಿ ವ್ಯವಸ್ಥೆ ಮಾಡಬೇಕು ಎಂದು ತಾಲೂಕು ಆಡಳಿತಕ್ಕೆ ಸೂಚನೆ ನೀಡಿದರು.

ತಾಲೂಕಿಗೆ ಪ್ರವೇಶ ನೀಡುವ ರಸ್ತೆಗಳಲ್ಲಿ ಬಿಗಿಭದ್ರತೆ ಒದಗಿಸುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ಜಿ.ಪಂ ಸಿಇಒ ಭಂವರಸಿಂಗ್ ಮೀನಾ, ಪೊಲೀಸ್ ವರಿಷ್ಠಾಧಿಕಾರಿ ಅಡೂರು ಶ್ರೀನಿವಾಸಲು, ಡಿವೈಎಸ್ಪಿ ಶಂಕರಗೌಡ ಪಾಟೀಲ, ಸೇಡಂ ಸಹಾಯಕ ಆಯುಕ್ತ ಪ್ರಭುರೆಡ್ಡಿ, ತಹಸೀಲ್ದಾರ್ ನಾಗಯ್ಯ ಹಿರೇಮಠ, ಪಿಎಸ್‌ಐ ಮಂಜುನಾಥ್ ರೆಡ್ಡಿ, ಪುರಸಭೆ ಮುಖ್ಯಾಧಿಕಾರಿ ಭಾರತಿ ದಂಡೋತಿ, ವಾಡಿ ಪುರಸಭೆ ಮುಖ್ಯಾಧಿಕಾರಿ ಮನೋಜಕುಮಾರ ಗುರಿಕಾರ ತಾ.ಪಂ ಇಒ ಮಹ್ಮದ ಅಕ್ರಂ ಪಾಷಾ ಮತ್ತು ಪೊಲೀಸ್‌ ಸಿಬ್ಬಂದಿ ಇದ್ದರು.

Leave a Reply

Your email address will not be published. Required fields are marked *