ಕಲಬುರಗಿ: ಡಾ.ಎಸ್.ಎಲ್ ಭೈರಪ್ಪನವರು ಆಧುನಿಕ ಕನ್ನಡ ಸಾಹಿತ್ಯದ ಶ್ರೇಷ್ಟ ಕಾದಂಬರಿಕಾರರು ಮತ್ತು ಲೇಖಕರು ಎಂದು ಉಪನ್ಯಾಸಕ, ಲೇಖಕ ಎಚ್.ಬಿ ಪಾಟೀಲ್ ಹೇಳಿದರು.
ನಗರದ ಆಳಂದ ರಸ್ತೆಯ ಸಂತೋಷ ಕಾಲೋನಿ ಕ್ರಾಸ್ ಸಮೀಪದ ರಿಪಬ್ಲಿಕ್ ಸ್ಪೋಕನ್ ಇಂಗ್ಲೀಷ್ ಅಕಾಡೆಮಿಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗಿದ ‘ಡಾ.ಎಸ್.ಎಲ್ ಭೈರಪ್ಪನವರ 94ನೇ ಜನುಮ ದಿನಾಚರಣೆ’ ಪ್ರಯುಕ್ತ ‘ಡಾ.ಎಸ್.ಎಲ್ ಭೈರಪ್ಪನವರ ಬದುಕು-ಬರಹ’ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕನ್ನಡ ಭಾಷೆಯಲ್ಲಿ ಪುಸ್ತಕಗಳನ್ನು ಬರೆದಿರುವ ಅವರ ಕೃತಿಗಳು ಇಂಗ್ಲೀಷ್ ಹಾಗೂ ಭಾರತೀಯ ಭಾಷೆಗಳಿಗೆ ಅನುವಾದಗೊಂಡು ಭಾರತದ ಸಾಹಿತ್ಯ ವಲಯದಲ್ಲಿ ಖ್ಯಾತಿ ಗಳಿಸಿದ್ದಾರೆ. ಕಾದಂಬರಿಗಳು ಹಲವಾರು ಮರುಮುದ್ರಣ ಕಂಡು ಕನ್ನಡದ ಜನಪ್ರಿಯ ಬರಹಗಾರರಾಗಿದ್ದಾರೆ. ಲೇಖಕ,ವಿಮರ್ಶಕ,ಅಧ್ಯಾಪಕರಾಗಿ ನಾಡಿಗೆ ಅಮೂಲ್ಯವಾದ ಸೇವೆ ಸಲ್ಲಿಸುತ್ತಿದ್ದಾರೆ ಎಂದರು.
ಡಾ.ಭೈರಪ್ಪನವರು ಭೀಮಕಾಯ, ಬೆಳಕು ಮೂಡಿತು, ಧರ್ಮಶ್ರೀ, ದೂರ ಸರಿದರು, ಮತದಾನ, ವಂಶವೃಕ್ಷ, ಜಲಪಾತ, ನಾಯಿ ನೆರಳು, ತಬ್ಬಲಿಯು ನೀನಾದೆ ಮಗನೆ, ಗೃಹಭಂಗ, ನಿರಾಕರಣ, ಗ್ರಹಣ, ದಾಟು, ಅನ್ವೇಷಣೆ, ಪರ್ವ ಸೇರಿದಂತೆ ಅನೇಕ ಕೃತಿಗಳನ್ನು ರಚಿಸಿದ್ದಾರೆ. ಅವರಿಗೆ ಪದ್ಮ ಭೂಷಣ ಪ್ರಶಸ್ತಿ, ಡಾ.ಬೆಟಗೇರಿ ಕೃಷ್ಣಶರ್ಮ ಪ್ರಶಸ್ತಿ , ನಾಡೋಜ ಪ್ರಶಸ್ತಿ, ಸರಸ್ವತಿ ಸಮ್ಮಾನ್ ಪ್ರಶಸ್ತಿ, ಪಂಪ ಪ್ರಶಸ್ತಿ, ಎನ್ ಟಿ ಆರ್ ರಾಷ್ಟ್ರೀಯ ಪ್ರಶಸ್ತಿ, ಗುಲಬರ್ಗಾ ವಿಶ್ವವಿದ್ಯಾನಿಲಯದ ಗೌರವ ಡಾಕ್ಟರೇಟ್, ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಸೇರಿದಂತೆ ಅನೇಕ ಪ್ರಶಸ್ತಿ-ಪುರಸ್ಕಾರ, ಗೌರವ ದೊರೆತಿವೆ ಎಂದು ಅವರ ಬದುಕು-ಬರಹವನ್ನು ವಿವರಿಸಿದರು.
ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಕ್ಷ ದತ್ತು ಹಡಪದ, ಪ್ರಮುಖರಾದ ಶಿವಯೋಗೆಪ್ಪಾ ಎಸ್. ಬಿರಾದಾರ, ಅಸ್ಲಾಂ ಶೇಖ್, ಮಹಾದೇವಪ್ಪ ಎಚ್.ಬಿರಾದಾರ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.