ಲಂಚ ಪಡೆದು ಸಿಕ್ಕಿಬಿದ್ದ ಬೆಂಗಳೂರು, ಬೀದರ್, ಮಂಡ್ಯದ​​ ಮೂವರು ವೈದ್ಯರ ಅಮಾನತು

ರಾಜ್ಯ

ಬೆಂಗಳೂರು: ಭಾರತೀಯ ವೈದ್ಯಕೀಯ ಆಯೋಗದ ಪರಿವೀಕ್ಷಕರ ತಂಡದಲ್ಲಿ ನಿಯೋಜಿತರಾಗಿ, ವೈದ್ಯಕೀಯ ಸಂಸ್ಥೆಗೆ ಅನುಕೂಲಕರವಾದ ತಪಾಸಣಾ ವರದಿ ನೀಡಲು ಲಂಚ ಸ್ವೀಕರಿಸಿದ ಆರೋಪದ ಮೇರೆಗೆ ಮೂವರು ವೈದ್ಯರನ್ನು ಕರ್ನಾಟಕದ ವೈದ್ಯಕೀಯ ಶಿಕ್ಷಣ ಇಲಾಖೆ ಅಮಾನತುಗೊಳಿಸಿದೆ.

ಬೆಂಗಳೂರಿನ ಅಟಲ್ ಬಿಹಾರಿ ವಾಜಪೇಯಿ, ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ಶರೀರ ಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕ ಡಾ. ಚೈತ್ರ ಎಂ.ಎಸ್, ಮಂಡ್ಯ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಮೂಳೆ ಚಿಕಿತ್ಸಾ ವಿಭಾಗದ ಪ್ರಾಧ್ಯಾಪಕರು ಮತ್ತು ಮುಖ್ಯಸ್ಥ ಡಾ. ಮಂಜಪ್ಪ ಸಿ.ಎನ್, ಬೀದರ್ ವೈದ್ಯಕೀಯ ವಿಜ್ಞಾನ ಸಂಸ್ಥೆ ಸಮುದಾಯ ವೈದ್ಯಕೀಯ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಅಶೋಕ್ ಸೆಲ್ಕೆ ಅವರನ್ನು ಅಮಾನತುಗೊಳಿಸಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಮೊಸೀನ್ ಆದೇಶ ಹೊರಡಿಸಿದ್ದಾರೆ.

ಲಂಚ ಸ್ವೀಕಾರ ಆರೋಪದ ಹಿನ್ನೆಲೆಯಲ್ಲಿ ತನಿಖೆ ನಡೆಸಿದ ಸಿಬಿಐ ಈಗಾಗಲೆ ಎಫ್‌ಐಆರ್‌ ದಾಖಲಿಸಿದೆ ಎಂದು ವರದಿ ಮಾಡಿದೆ. ಈ ಕುರಿತು ಸಿಬಿಐ ಇಲಾಖೆಗೆ ಈ-ಮೇಲ್‌ ಮೂಲಕ ಮಾಹಿತಿ ರವಾನಿಸಿದೆ. ಈ ಹಿನ್ನೆಲೆಯಲ್ಲಿ ಈ ಮೂವರ ಅಮಾನತಿಗೆ ಇಲಾಖೆಯ ನಿಯಮಾನುಸಾರ ಕ್ರಮ ಕೈಗೊಳ್ಳಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಡಾ. ಚೈತ್ರ, ಡಾ. ಮಂಜಪ್ಪ, ಡಾ. ಅಶೋಕ್‌ ಶೆಲ್ಕೆ ಅವರು ಛತ್ತೀಸ್‌ಗಡ ರವತ್‌ಪುರ ಸರ್ಕಾರ್‌ ಇನ್‌ಸ್ಟಿಟ್ಯೂಟ್‌ ಆಫ್‌ ಮೆಡಿಕಲ್ ಸೈನ್ಸ್‌ ಆ್ಯಂಡ್‌ ರಿಸರ್ಚ್‌ ಸಂಸ್ಥೆಗೆ ಅನುಕೂಲಕರ ತಪಾಸಣಾ ವರದಿ ನೀಡುವುದಕ್ಕಾಗಿ ಲಂಚ ಪಡೆದಿದ್ದಾರೆ. ಇವರನ್ನು ಸಿಬಿಐ ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

ಎಲ್ಲ ವಿಷಯಗಳನ್ನು ಕೂಲಂಕಶವಾಗಿ ಪರಿಶೀಲಿಸಿದ ಇಲಾಖೆಯ ಪ್ರಧಾನ ಕಾರ್ಯದರ್ಶ ಮೊಹಮ್ಮದ್ ಮೊಸೀನ್ ಮೂವರು ವೈದ್ಯರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.

Leave a Reply

Your email address will not be published. Required fields are marked *