ಸುದ್ದಿ ಸಂಗ್ರಹ ಕಲಬುರಗಿ
ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮರುಪರಿಶೀಲನಾ ಅಭಿಯಾನ ಆರಂಭವಾಗಿದ್ದು, ಗ್ರಾಹಕರು ಸಹಕರಿಸಬೇಕು ಎಂದು ಜೆಸ್ಕಾಂ ಪ್ರಕಟಣೆಯಲ್ಲಿ ಕೋರಿದೆ.
ಮೀಟರ್ ರೀಡರ್‌ಗಳು ಹಾಗೂ ಸಿಬ್ಬಂದಿ ಮನೆ ಮನೆಗೆ ಭೇಟಿ ನೀಡಿ, ಫಲಾನುಭವಿಗಳ ಗುರುತು ಮತ್ತು ದಾಖಲೆಗಳನ್ನು ಪರಿಶೀಲಿಸುವರು. ಅಗತ್ಯ ಮಾಹಿತಿಯನ್ನು ಮೊಬೈಲ್ ಆ್ಯಪ್ ಮೂಲಕ ದಾಖಲಿಸುವರು. ಘೋಷಣಾ ಪತ್ರವನ್ನೂ ಭರ್ತಿ ಮಾಡಿಸಿಕೊಂಡು ಪರಿಶೀಲನಾ ಪ್ರಕ್ರಿಯೆ ಪೂರ್ಣಗೊಳಿಸುವರು.
ಪರಿಶೀಲನೆ ವೇಳೆ ಫಲಾನುಭವಿಗಳು ಆಧಾರ್ ಕಾರ್ಡ್, ಪಾಸ್‌ಪೋರ್ಟ್ ಅಳತೆಯ ಭಾವಚಿತ್ರ, ಮತದಾರರ ಗುರುತಿನ ಚೀಟಿ, ಪ್ಯಾನ್ ಕಾರ್ಡ್, ರೇಷನ್ ಕಾರ್ಡ್, ಜಾತಿ ಪ್ರಮಾಣ ಪತ್ರ ಹಾಗೂ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರೆ, ಬಾಡಿಗೆ ಒಪ್ಪಂದ ಪತ್ರ ಸಿದ್ಧವಾಗಿಟ್ಟುಕೊಳ್ಳಬೇಕು ಎಂದು ಮನವಿ ಮಾಡಿದೆ.
ಗೃಹ ಜ್ಯೋತಿ ಯೋಜನೆಯ ಮರುಪರಿಶೀಲನೆಯು ಸ್ಥಳದಲ್ಲಿಯೇ ಮೀಟರ್ ರೀಡರ್ ಮೂಲಕ ಮಾತ್ರ ನಡೆಯಲಿದ್ದು, ಗ್ರಾಹಕರು ಹಾಗೂ ಫಲಾನುಭವಿಗಳು ಜೆಸ್ಕಾಂ ಸಿಬ್ಬಂದಿಗೆ ಅಗತ್ಯ ಸಹಕಾರ ನೀಡಿ ಪರಿಶೀಲನಾ ಕಾರ್ಯ ಯಶಸ್ವಿಗೊಳಿಸಬೇಕು ಎಂದು ಕೋರಲಾಗಿದೆ.