ಬೆಂಗಳೂರು: ಪ್ರಸಕ್ತ ಸಾಲಿನ ಬೇಸಿಗೆಯಲ್ಲಿ ವಾಡಿಕೆಗಿಂತ ಹೆಚ್ಚು ತಾಪಮಾನ ಏರಿಕೆಯಾಗಿದ್ದು, ಹೆಚ್ಚಿನ ಬಿಸಿಲು ಇರುವ ಕಾರಣ, ಗ್ರಾಮೀಣ ಭಾಗದ ಜೀವನೋಪಾಯದ ಪ್ರಮುಖ ಭಾಗವಾದ ನರೇಗಾ ಯೋಜನೆಯಡಿ ಕೂಲಿ ಕೆಲಸ ಮಾಡುವ ಬೆಳಗಾವಿ ಮತ್ತು ಕಲಬುರಗಿ ಕಂದಾಯ ವಿಭಾಗದ ಕಾರ್ಮಿಕರಿಗೆ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ 30% ರಷ್ಟು ಹಾಗೂ ಜೂನ್‌ನಲ್ಲಿ 20% ರಷ್ಟು ಕೆಲಸದ ಪ್ರಮಾಣದಲ್ಲಿ ರಿಯಾಯಿತಿ ಘೋಷಿಸಿರುವುದಾಗಿ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಬೇಸಿಗೆ ದಿನಗಳಲ್ಲಿ ಕೂಲಿ ಕಾರ್ಮಿಕರು ಶಾಖಾಘಾತದಿಂದ, ತಮ್ಮ ಆರೋಗ್ಯದ ಮೇಲೆ ಉಂಟಾಗುವ ದುಷ್ಪರಿಣಾಮಗಳನ್ನು ತಪ್ಪಿಸಲು ಬಿಳಿಯ ಬಣ್ಣದ ಸಡಿಲವಾದ ಖಾದಿ ಬಟ್ಟೆ ಹಾಗೂ ತಲೆಯ ಮೇಲೆ ಬಿಳಿ ಬಣ್ಣದ ರುಮಾಲು ಧರಿಸಿ ಕೆಲಸ ಮಾಡಬೇಕು. ಚಹಾ, ಕಾಫಿ, ತಂಪಾದ ಪಾನೀಯ, ಮಸಾಲೆ ಮತ್ತು ಎಣ್ಣೆಭರಿತ ಆಹಾರದ ಬದಲಾಗಿ ಹೆಚ್ಚು ತೇವಾಂಶವುಳ್ಳ ತರಕಾರಿ, ಅಂಬಲಿ, ಮಜ್ಜಿಗೆ, ಎಳೆನೀರು ಸೇವನೆ ಮಾಡಬೇಕು. ನೀರನ್ನು ಯಥೆಚ್ಛವಾಗಿ ಕುಡಿಯಬೇಕು ಎಂದು ಸಲಹೆ ನೀಡಿದ್ದಾರೆ.
ಸಂಬಂಧಿಸಿದ ಅಧಿಕಾರಿಗಳು ಕಾಮಗಾರಿ ಸ್ಥಳಗಳಲ್ಲಿ ಯೋಜನೆಯ ಮಾರ್ಗಸೂಚಿಯಂತೆ ಕಡ್ಡಾಯವಾಗಿ ನೆರಳು, ಶುದ್ಧ ಕುಡಿಯುವ ನೀರು, ಪ್ರಥಮ ಚಿಕಿತ್ಸಾ ಪೆಟ್ಟಿಗೆ ಮುಂತಾದ ಮೂಲಭೂತ ಸೌಕರ್ಯ ಒದಗಿಸಲು ಕ್ರಮವಹಿಸಲು ನಿರ್ದೇಶನ ನೀಡಿದ್ದಾರೆ.