ಕಲಬುರಗಿ: ಜಂಕ್ ಫುಡ್ ಸೇವನೆ ಮಾಡುವುದು ಬೇಡ ಎಂದು ವೈದ್ಯಾಧಿಕಾರಿ ಡಾ. ಅನುಪಮಾ ಎಸ್. ಕೇಶ್ವಾರ ಹೇಳಿದರು.
ನಗರದ ಶೇಖರೋಜಾದ ಶಹಾಬಜಾರ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಸೋಮವಾರ ಹಮ್ಮಿಕೊಳ್ಳಲಾಗಿದ್ದ ‘ರಾಷ್ಟ್ರೀಯ ಜಂಕ್ ಫುಡ್ ದಿನಾಚರಣೆ’ಯಲ್ಲಿ ಮಾತನಾಡಿದ ಅವರು, ಜಂಕ್ ಫುಡ್’ನಲ್ಲಿ ಹೆಚ್ಚಿನ ಕೊಬ್ಬು, ಸಕ್ಕರೆ, ಉಪ್ಪು ಮತ್ತು ಕಡಿಮೆ ಪೌಷ್ಟಿಕಾಂಶದ ಮೌಲ್ಯವನ್ನು ಹೊಂದಿರುತ್ತವೆ. ಅತಿಯಾಗಿ ಜಂಕ್ ಫುಡ್ ಸೇವನೆಯಿಂದ ಬೊಜ್ಜು, ಮಧುಮೇಹ ಮತ್ತು ಹೃದಯ ಸಂಬಂಧಿತ ಕಾಯಿಲೆಗಳಂತಹ ಆರೋಗ್ಯ ಸಮಸ್ಯೆ ಉಂಟಾಗುತ್ತವೆ ಎಂದರು.
ಸಮತೋಲಿತ ಆಹಾರದೊಂದಿಗೆ ಜಂಕ್ ಫುಡ್ ಸ್ವಲ್ಪ ಪ್ರಮಾಣದಲ್ಲಿ ಸೇವಿಸುವುದು ಆರೋಗ್ಯಕ್ಕೆ ಹಾನಿಕಾರಕವಲ್ಲ. ಆದರೆ ಅದನ್ನು ಅತಿಯಾಗಿ ಸೇವಿಸುವುದರಿಂದ ಸಮಸ್ಯೆ ಉಂಟಾಗುತ್ತದೆ ಎಂದರು.
ಸಕ್ಕರೆ, ಆಹಾರ ಮಾನವನ ಭಾವನಾತ್ಮಕ ಆರೋಗ್ಯದ ಮೇಲೆ ಬೀರುವ ಪರಿಣಾಮದ ಕುರಿತು ಇತರ ಸಂಶೋಧನೆಗಳನ್ನು ನಡೆಸಲಾಗಿದೆ, ಜಂಕ್ ಫುಡ್ ಸೇವನೆಯು ಶಕ್ತಿಯ ಮಟ್ಟ ಮತ್ತು ಭಾವನಾತ್ಮಕ ಯೋಗಕ್ಷೇಮದ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ ಎಂದು ಸೂಚಿಸಿದೆ ಎಂದರು.
ಕಾರ್ಯಕ್ರಮದಲ್ಲಿ ಬಳಗದ ಅಧ್ಯಕ್ಷ ಎಚ್.ಬಿ ಪಾಟೀಲ, ಸಮಾಜ ಸೇವಕ ಶಿವಯೋಗೆಪ್ಪಾ ಎಸ್. ಬಿರಾದಾರ ಮತ್ತು ಆರೋಗ್ಯ ಕೇಂದ್ರದ ಸಿಬ್ಬಂದಿ, ಬಡಾವಣೆಯ ನಾಗರಿಕರು ಇದ್ದರು.