ನವದೆಹಲಿ: 2024ರ ಟಿ20 ವಿಶ್ವಕಪ್ ಗೆಲುವು ಸಾಧಿಸಿದ ಟೀಂ ಇಂಡಿಯಾಗೆ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಭರ್ಜರಿ ಬಹುಮಾನ ಘೋಷಿಸಿದ್ದಾರೆ.
ಕೆನ್ಸಿಂಗ್ಟನ್ ಓವಲ್ನಲ್ಲಿ ಶನಿವಾರ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ರೋಹಿತ್ ಶರ್ಮಾ ನೇತೃತ್ವದ ಭಾರತ 7 ರನ್’ಗಳ ರೋಚಕ ಗೆಲುವು ಸಾಧಿಸಿ ಹೊಸ ಟಿ20 ವರ್ಡ್ ಚಾಂಪಿಯನ್ಸ್ ಕಿರೀಟವನ್ನು ಮುಡಿಗೇರಿಸಿಕೊಂಡಿತು.
ವೆಸ್ಟ್ ಇಂಡೀಸ್’ನಲ್ಲಿ ಭಾರತದ ಐತಿಹಾಸಿಕ ಗೆಲುವು ಸಾಧಿಸಿ ಒಂದು ದಿನದ ನಂತರ ಬಿಸಿಸಿಐ ಕಾರ್ಯದರ್ಶಿ ಶಾ ಅವರು ವಿಶ್ವಕಪ್ ಪಂದ್ಯಾವಳಿಯಲ್ಲಿ ಅಜೇಯ ಪ್ರದರ್ಶನ ನೀಡಿದ ತಂಡಕ್ಕೆ 125 ಕೋಟಿ ರೂ.ಗಳ ಬಹುಮಾನವನ್ನು ಘೋಷಿಸಿದ್ದಾರೆ.
ಐಸಿಸಿ ಪುರುಷರ ಟಿ20 ವಿಶ್ವಕಪ್ 2024 ಅನ್ನು ಗೆಲುವು ಸಾಧಿಸಿದ ಟೀಮ್ ಇಂಡಿಯಾಕ್ಕೆ 125 ಕೋಟಿ ರೂ.ಗಳ ಬಹುಮಾನದ ಮೊತ್ತವನ್ನು ಘೋಷಿಸಲು ನನಗೆ ಸಂತೋಷವಾಗಿದೆ. ತಂಡವು ಪಂದ್ಯಾವಳಿಯುದ್ದಕ್ಕೂ ಅಸಾಧಾರಣ ಪ್ರತಿಭೆ, ದೃಢನಿಶ್ಚಯ ಮತ್ತು ಕ್ರೀಡಾ ಮನೋಭಾವವನ್ನು ಪ್ರದರ್ಶಿಸಿದೆ. ಈ ಅಸಾಧಾರಣ ಸಾಧನೆಗಾಗಿ ಎಲ್ಲಾ ಆಟಗಾರರು, ತರಬೇತುದಾರರು ಮತ್ತು ಸಹಾಯಕ ಸಿಬ್ಬಂದಿಗೆ ಅಭಿನಂದನೆಗಳು ಎಂದು ಶಾ ಟ್ವೀಟ್ ಮಾಡಿದ್ದಾರೆ.