ಕಲಬುರಗಿ: ದುಪ್ಪಟ್ಟು ಬೆಲೆಗೆ ರಸಗೊಬ್ಬರ ಮಾರಾಟ ಮಾಡುತ್ತಿದ್ದ ಅಂಗಡಿ ಮೇಲೆ ಅಧಿಕಾರಿಗಳ ದಾಳಿ

ಜಿಲ್ಲೆ

ಕಲಬುರಗಿ: ರಾಜ್ಯದಲ್ಲಿ ಉತ್ತಮ ಮಳೆಯಾದ ಹಿನ್ನೆಲೆ ಬಿತ್ತನೆ ಕಾರ್ಯ ಜೋರಾಗಿದೆ. ಇದನ್ನೆ ಬಂಡವಾಳ ಮಾಡಿಕೊಂಡು ಕಲಬುರಗಿ ಜಿಲ್ಲೆಯ ರೈತರಿಂದ ದುಪ್ಪಟ್ಟು ಹಣ ಪಡೆದು ರಸಗೊಬ್ಬರ ಮಾರಾಟ ಮಾಡುತ್ತಿದ್ದ ಅಂಗಡಿ ಮೇಲೆ ಕೃಷಿ ಇಲಾಖೆ ಅಧಿಕಾರಿಗಳು ದಾಳಿ ಮಾಡಿ, ಅಂಗಡಿ ಮಾಲೀಕನಿಗೆ ನೋಟಿಸ್ ನೀಡಿದ್ದಾರೆ.

ಜಿಲ್ಲೆಯಲ್ಲಿ ಈ ಬಾರಿ ಉತ್ತಮ ಮಳೆಯಾದ ಹಿನ್ನೆಲೆಯಲ್ಲಿ ಲಕ್ಷಾಂತರ ಹೆಕ್ಟೇರ್ ಪ್ರದೇಶದಲ್ಲಿ ವಿವಿಧ ಬೆಳೆಗಳ ಬಿತ್ತನೆ ಮಾಡಲಾಗಿದೆ. ಅದನ್ನೆ ಬಂಡವಾಳ ಮಾಡಿಕೊಂಡಿರುವ ಅಫಜಲಪುರ ತಾಲೂಕಿನ ಗಾಣಗಾಪುರದ ರೇವಣಸಿದ್ದೇಶ್ವರ ಅಗ್ರೋ ಏಜೆನ್ಸಿ ಗೊಬ್ಬರ ಅಂಗಡಿ ಮಾಲೀಕ, ರಸಗೊಬ್ಬರ ಹಾಗೂ ಇತರೆ ವಸ್ತುಗಳನ್ನು ಎಂಆರ್‌ಪಿ ದರಕ್ಕಿಂತ ಎರಡು ಪಟ್ಟು ಹೆಚ್ಚಿನ ಬೆಲೆಗೆ ರೈತರಿಗೆ ಮಾರಾಟ ಮಾಡುತ್ತಿದ್ದಾರೆ.

ರೈತರು ರಸಗೊಬ್ಬರದ ಬಿಲ್ ಕೇಳಿದರೆ ನಕಲಿ ಬಿಲ್ ನೀಡುತ್ತಿದ್ದಾರೆ. ರೈತ ಮತ್ತು ಅಂಗಡಿ ಮಾಲೀಕರ ವೀಡಿಯೋ ವೈರಲ್ ಆಗುತ್ತಿದ್ದಂತೆ ಕೃಷಿ ಇಲಾಖೆ ಅಧಿಕಾರಿಗಳು ಅಂಗಡಿ ಮೇಲೆ ದಾಳಿ ನಡೆಸಿ ಅಂಗಡಿ ಮಾಲೀಕನಿಗೆ ನೋಟಿಸ್ ನೀಡಿದ್ದಾರೆ.

ಅಫಜಲಪುರದಲ್ಲಿ ರಸಗೊಬ್ಬರ, ಯೂರಿಯಾ ಮತ್ತು ಕ್ರಿಮಿನಾಶಕ ಔಷಧಿ ದುಪ್ಪಟ್ಟು ಬೆಲೆಗೆ ಮಾರಾಟವಾದರೆ, ಜೇವರ್ಗಿ ಮತ್ತು ಯಡ್ರಾಮಿ ತಾಲೂಕಿನ ಕೆಲವು ರಸಗೊಬ್ಬರದ ಅಂಗಡಿ ಮಾಲೀಕರು 2 ವರ್ಷದ ಹಿಂದೆ ಅವಧಿ ಮುಗಿದ ಕ್ರಿಮಿನಾಶಕಗಳನ್ನು ರೈತರಿಗೆ ಮಾರಾಟ ಮಾಡುತ್ತಿದ್ದಾರೆ. ಈ ರೀತಿ ರೈತರಿಗೆ ವಂಚಿಸುತ್ತಿರುವ ಫರ್ಟಿಲೈಸರ್ ಅಂಗಡಿಗಳ ಪರಿಶೀಲನೆ ನಡೆಸಿ, ಅಧಿಕಾರಿಗಳು ಅವಧಿ ಮುಗಿದ ಕ್ರಿಮಿನಾಶಕಗಳನ್ನು ವಶಕ್ಕೆ ಪಡೆದು ಮಾಲೀಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಹಸಿರು ಸೇನೆ ರೈತ ಸಂಘದ ಮುಖಂಡರು ಆಗ್ರಹಿಸಿದ್ದಾರೆ.

Leave a Reply

Your email address will not be published. Required fields are marked *