Site icon ಸುದ್ದಿ ಸಂಗ್ರಹ

ರಾಷ್ಟ್ರಕವಿ ಕುವೆಂಪುಗೆ ಮರಣೋತ್ತರ ‘ಭಾರತ ರತ್ನ’ಕ್ಕೆ ಕೇಂದ್ರಕ್ಕೆ ರಾಜ್ಯ ಸರ್ಕಾರ ಶಿಫಾರಸು

ಬೆಂಗಳೂರು: ರಾಷ್ಟ್ರಕವಿ ಕುವೆಂಪುಗೆ ಮರಣೋತ್ತರ ಭಾರತ ರತ್ನ ನೀಡುವಂತೆ ಕೇಂದ್ರಕ್ಕೆ ಶಿಫಾರಸು ಮಾಡಲು ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ.

ನಗರದಲ್ಲಿ ಗುರುವಾರ ಸಚಿವ ಸಂಪುಟ ಸಭೆ ನಡೆಸಲಾಯಿತು. ರಾಷ್ಟ್ರಕವಿ ಕುವೆಂಪು ಅವರಿಗೆ ಭಾರತ ರತ್ನ ನೀಡುವಂತೆ ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರ ಶಿಫಾರಸು ಮಾಡಲು ನಿರ್ಧರಿಸಿದೆ ಎಂದು ಸಚಿವ ಎಚ್.ಕೆ ಪಾಟೀಲ ತಿಳಿಸಿದ್ದಾರೆ.

ಕುವೆಂಪು ಅವರಿಗೆ ಮರಣೋತ್ತರ ಭಾರತ ರತ್ನ ಪ್ರಶಸ್ತಿ ನೀಡಲು ಕೇಂದ್ರಕ್ಕೆ ಶಿಫಾರಸು ಮಾಡುವಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಹಿರಿಯ ಸಾಹಿತಿಗಳು ಈ ಹಿಂದೆಯೇ ಮನವಿ ಮಾಡಿದ್ದರು. ಅದರಂತೆ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.

ಕುಪ್ಪಳಿ ವೆಂಕಟಪ್ಪ ಪುಟ್ಟಪ್ಪ ಅವರು ಕನ್ನಡದ ಮೇರುಕವಿ, ನಾಟಕಕಾರ ಮತ್ತು ವಿಮರ್ಶಕ. ಕನ್ನಡ ಸಾಹಿತ್ಯಕ್ಕೆ ಕುವೆಂಪು ಕೊಡುಗೆಯನ್ನು ಗುರುತಿಸಿ ಕರ್ನಾಟಕ ಸರ್ಕಾರ ‘ರಾಷ್ಟ್ರಕವಿ’ ಬಿರುದನ್ನು 1964ರಲ್ಲಿ ನೀಡಿ ಗೌರವಿಸಿತು. ಅವರ ‘ಶ್ರೀ ರಾಮಾಯಣ ದರ್ಶನಂ’ ಕೃತಿಗೆ ಜ್ಞಾನಪೀಠ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಈ ಪ್ರಶಸ್ತಿ ಪಡೆದ ಮೊದಲ ಕನ್ನಡ ಸಾಹಿತಿ ಎಂಬ ಹೆಗ್ಗಳಿಕೆಗೆ ಕುವೆಂಪು ಪಾತ್ರರಾಗಿದ್ದಾರೆ.

Exit mobile version