ಕಲಬುರಗಿ: ಭಾರತದಲ್ಲಿ ವಿನ್ಯಾಸ, ತಯಾರಿಕೆ ಮತ್ತು ಜೋಡಣೆಯನ್ನು ಉತ್ತೇಜಿಸಲು, ವ್ಯಾಪಾರ-ವ್ಯವಹಾರ ವೃದ್ಧಿಗೆ ಭಾರತ ಸರ್ಕಾರವು ಪ್ರಾರಂಭಿಸಿದ ಮೇಕ್ ಇನ್ ಇಂಡಿಯಾ ಯೋಜನೆ ಪೂರಕವಾಗಿದೆ ಎಂದು ಜಿಲ್ಲಾ ಸಣ್ಣ ಕೈಗಾರಿಕೆಗಳ ಮಾಲೀಕರ ಸಂಘದ ಅಧ್ಯಕ್ಷ ಭೀಮಾಶಂಕರ ಪಾಟೀಲ ಹೇಳಿದರು.
ನಗರದ ಹೊಸ ಜೇವರ್ಗಿ ರಸ್ತೆಯ ಗೆಟ್ಸ್ ಡಿಗ್ರಿ ಕಾಲೇಜಿನಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗಿದ “ಮೇಕ್ ಇನ್ ಇಂಡಿಯಾದ ದಶಮಾನೋತ್ಸವ” ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಅರ್ಥಶಾಸ್ತ್ರ ಉಪನ್ಯಾಸಕ ಎಚ್.ಬಿ ಪಾಟೀಲ ಮಾತನಾಡಿ, ಉತ್ಪಾದನೆಯಲ್ಲಿ ಹೂಡಿಕೆ ಹೆಚ್ಚಿಸುವುದು, ನಾವೀನ್ಯತೆಯನ್ನು ಪ್ರೋತ್ಸಾಹಿಸುವುದು, ವ್ಯಾಪಾರ ಮಾಡಲು ಸುಲಭವಾದ ವಾತಾವರಣ ಸೃಷ್ಟಿಸುವುದು, ಉದ್ಯೋಗ ಸೃಷ್ಟಿ, ಮೂಲಸೌಕರ್ಯ ಅಭಿವೃದ್ಧಿ ಮತ್ತು ಕೌಶಲ್ಯ ವೃದ್ಧಿ ಉತ್ತೇಜಿಸುವುದು, ಜಾಗತಿಕ ಸ್ಪರ್ಧಾತ್ಮಕತೆಯನ್ನು ಉತ್ತೇಜಿಸುವುದು ಈ ಯೋಜನೆಯ ಪ್ರಮುಖ ಉದ್ದೇಶಗಳಾಗಿವೆ. ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.
ಕಾರ್ಯಕ್ರಮದಲ್ಲಿ ಉಪನ್ಯಾಸಕರಾದ ಶಿವಲಿಂಗಪ್ಪ ತಳವಾರ, ಶಶಿಕುಮಾರ್ ಸೇರಿದಂತೆ ಸಿಬ್ಬಂದಿ, ವಿದ್ಯಾರ್ಥಿಗಳು ಇದ್ದರು.