ನವದೆಹಲಿ: ನನ್ನ ಸ್ನೇಹಿತ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ಭಾರತಕ್ಕೆ ಸ್ವಾಗತಿಸಲು ಸಂತೋಷವಾಗುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಖುಷಿ ವ್ಯಕ್ತಪಡಿಸಿದ್ದಾರೆ.
ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಮೋದಿ, ನನ್ನ ಸ್ನೇಹಿತ ಅಧ್ಯಕ್ಷ ಪುಟಿನ್ ಅವರನ್ನು ಭಾರತಕ್ಕೆ ಸ್ವಾಗತಿಸಲು ಸಂತೋಷವಾಗುತ್ತಿದೆ. ಇಂದು ಸಂಜೆ ಮತ್ತು ನಾಳೆ ನಮ್ಮ ಸಂವಾದ ಎದುರು ನೋಡುತ್ತಿದ್ದೆನೆ. ಭಾರತ-ರಷ್ಯಾ ಸ್ನೇಹವು ಕಾಲಾತೀತವಾಗಿದ್ದು, ಇದು ನಮ್ಮ ಜನರಿಗೆ ಹೆಚ್ಚಿನ ಪ್ರಯೋಜನ ನೀಡಿದೆ ಎಂದು ತಿಳಿಸಿದ್ದಾರೆ.
ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಗುರುವಾರ ಸಂಜೆ ದೆಹಲಿಯ ಪಾಲಂ ವಿಮಾನ ನಿಲ್ದಾಣಕ್ಕೆ ಬಂದಿಳಿದರು. ಅವರನ್ನು ಪ್ರಧಾನಿ ಮೋದಿ ಆತ್ಮೀಯವಾಗಿ ಸ್ವಾಗತಿಸಿದರು. ಬಳಿಕ ಇಬ್ಬರು ನಾಯಕರು ಒಂದೆ ಕಾರಿನಲ್ಲಿ ಪ್ರಯಾಣ ಬೆಳೆಸಿದರು.
ರಷ್ಯಾ ಅಧ್ಯಕ್ಷ ಪುಟಿನ್ ಎರಡು ದಿನಗಳ ಭಾರತ ಭೇಟಿಯಲ್ಲಿದ್ದಾರೆ. ಡಿ.5 ರಂದು ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ 23ನೇ ಭಾರತ-ರಷ್ಯಾ ವಾರ್ಷಿಕ ಶೃಂಗಸಭೆ ನಡೆಸಲಿದ್ದಾರೆ.