ಸುದ್ದಿ ಸಂಗ್ರಹ ಚಿತ್ತಾಪುರ
ಬೇಸಿಗೆ ಶುರುವಾಗುತ್ತಿದ್ದಂತೆ ನೀರಿನ ಸಮಸ್ಯೆ ಹೆಚ್ಚುತ್ತದೆ. ಹೀಗಾಗಿ ತಾಲೂಕಿನ ಯಾವ ಯಾವ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆ ಎನ್ನುವ ಕುರಿತು ಮುನ್ನೆಚ್ಚರಿಕೆ ವಹಿಸಿ ಎಂದು ಸೇಡಂ ಸಹಾಯಕ ಆಯುಕ್ತ ಪ್ರಭುರೆಡ್ಡಿ ಅಧಿಕಾರಿಗಳಿಗೆ ಸೂಚಿಸಿದರು.
ಪಟ್ಟಣದ ಪ್ರಜಾಸೌಧದ ಸಭಾಂಗಣದಲ್ಲಿ ಕುಡಿಯುವ ನೀರಿನ ಸಮಸ್ಯೆ ಕುರಿತು ಹಮ್ಮಿಕೊಳ್ಳಲಾಗಿದ್ದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಪಟ್ಟಣ ಸೇರಿದಂತೆ ತಾಲೂಕಿನ ಗ್ರಾಮಗಳಲ್ಲಿ ನೀರಿನ ಸಮಸ್ಯೆ ಇರುತ್ತವೆ, ಅಧಿಕಾರಿಗಳು ಕೂಡಲೆ ಎಲ್ಲೆಲ್ಲಿ ಕುಡಿಯುವ ನೀರಿನ ಸಮಸ್ಯೆಗಳಿವೆ ಎನ್ನುವ ಬಗ್ಗೆ ಪಟ್ಟಿಮಾಡಿಕೊಂಡು ಸ್ಥಳಕ್ಕೆ ಭೇಟಿ ನೀಡುವುದರ ಮೂಲಕ ಸಮಸ್ಯೆ ಬಗೆಹರಿಸಿ ಎಂದರು.
ಈ ಸಂದರ್ಭದಲ್ಲಿ ತಹಸೀಲ್ದಾರ್ ನಾಗಯ್ಯ ಹಿರೇಮಠ, ಗ್ರೇಡ್-2 ತಹಸೀಲ್ದಾರ್ ರಾಜಕುಮಾರ ಮರತೂರಕರ್, ಪುರಸಭೆ ಮುಖ್ಯಾಧಿಕಾರಿ ಮನೋಜಕುಮಾರ ಗುರಿಕಾರ್, ಪಶು ಸಂಗೋಪನಾ ಇಲಾಖೆಯ ಅಧಿಕಾರಿ ಶಂಕರ ಕಣ್ಣಿ, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಸಂಜೀವಕುಮಾರ ಮಾನಕರ್ ಮತ್ತು ಕಂದಾಯ ಇಲಾಖೆಯ ಅಧಿಕಾರಿಗಳು, ಗ್ರಾ.ಪಂ ಅಭಿವೃದ್ಧಿ ಅಧಿಕಾರಿಗಳು ಸೇರಿದಂತೆ ಅನೇಕರು ಇದ್ದರು.