ಸುದ್ದಿ ಸಂಗ್ರಹ ಬೆಂಗಳೂರು
ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ ಕಡಿಮೆಯಾಗಲಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರು ಡಿಸಿ-ಸಿಇಓಗಳಿಗೆ ಸೂಚನೆ ನೀಡಿದ್ದಾರೆ.
ವಿಧಾನಸೌಧದಲ್ಲಿ ಗ್ರಾಮೀಣ ಹಾಗೂ ಪಟ್ಟಣ ಪ್ರದೇಶಗಳಲ್ಲಿನ ಕುಡಿಯುವ ನೀರು ಪೂರೈಕೆ ಕುರಿತಾಗಿ ಜಿಲ್ಲಾ ಉಸ್ತುವಾರಿ ಸಚಿವರು, ಡಿಸಿ, ಸಿಇಓಗಳ ಜೊತೆ ಸಭೆ ನಡೆಸಿದರು. ಕೇಂದ್ರ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆಗಸ್ಟ್ ತಿಂಗಳಲ್ಲಿ ವಾಡಿಕೆಯಂತೆ ಮಳೆಯಾಗುವ ಸಾಧ್ಯತೆಯಿದ್ದು, ಸೆಪ್ಟೆಂಬರ್ ತಿಂಗಳಲ್ಲಿ ಮಳೆ ಕಡಿಮೆ ನಿರೀಕ್ಷಿಸಲಾಗಿದೆ. ಕುಡಿಯುವ ನೀರಿಗೆ ತೊಂದರೆಯಾದರೆ ಆಯಾ ಜಿಲ್ಲಾಧಿಕಾರಿಗಳೆ ಇದಕ್ಕೆ ಹೊಣೆಯಾಗುತ್ತಾರೆ. ಕಂದಾಯ ಇಲಾಖೆ, ಪಂಚಾಯತ್ ರಾಜ್ ಇಲಾಖೆ ಮತ್ತು ನಗರಾಭಿವೃದ್ಧಿ ಇಲಾಖೆಗಳು ಪರಸ್ಪರ ಸಮನ್ವಯದೊಂದಿಗೆ ಕಾರ್ಯ ನಿರ್ವಹಿಸಬೇಕು ಎಂದು ಸೂಚನೆ ನೀಡಿದರು.
ಸಾರ್ವಜನಿಕರಿಗೆ ನೆರಳಿನ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು. ಕುಡಿಯುವ ನೀರು ಪೂರೈಕೆ ಖಾತ್ರಿಪಡಿಸಲು ಯಾವುದೆ ಅನುದಾನದ ಕೊರತೆಯಿಲ್ಲ. ಜಿಲ್ಲಾಧಿಕಾರಿಗಳ ವರದಿ ಆಧಾರದಲ್ಲಿ ಅಗತ್ಯ ಅನುದಾನ ಒದಗಿಸಲು ಹಣಕಾಸು ಇಲಾಖೆಗೆ ಈಗಾಗಲೆ ಸೂಚನೆ ನೀಡಲಾಗಿದೆ ಎಂದು ಸಿಎಂ ತಿಳಿಸಿದರು.

