ಸುದ್ದಿ ಸಂಗ್ರಹ ಕಲಬುರಗಿ
ಸೂಪರ್ ಎಲ್ ನಿನೋ ಪರಿಣಾಮದಿಂದ ಉಂಟಾಗಿರುವ ಪ್ರಕೃತಿ ವಿಕೋಪವನ್ನು ಸಮರ್ಥವಾಗಿ ನಿಭಾಯಿಸಬೇಕು. ಈ ನಿಟ್ಟಿನಲ್ಲಿ ಕಲ್ಯಾಣ ಕರ್ನಾಟಕ ಭಾಗದ ಜನರ ಜೀವನೋಪಾಯಕ್ಕೆ ಮತ್ತು ಜಾನುವಾರುಗಳಿಗೆ ಯಾವುದೆ ರೀತಿಯ ಸಮಸ್ಯೆಯಾಗದಂತೆ ಪರಿಸ್ಥಿತಿಯನ್ನು ನಿಭಾಯಿಸಬೇಕು ಎಂದು ಉಪ ಮುಖ್ಯಮಂತ್ರಿಯೂ ಆಗಿರುವ ಕಂದಾಯ ಸಚಿವ ಜಿ.ಪರಮೇಶ್ವರ್ ಹೇಳಿದರು.
ಗುಲಬರ್ಗಾ ವಿಶ್ವವಿದ್ಯಾಲಯದ ಸಭಾಂಗಣದ ಡಾ.ಬಿ.ಆರ್ ಅಂಬೇಡ್ಕರ್ ಸಭಾಂಗಣದಲ್ಲಿ ಕಲಬುರಗಿ ಕಂದಾಯ ವಿಭಾಗದ ವಿವಿಧ ಇಲಾಖೆಗಳ ಹಾಗೂ ಪ್ರಕೃತಿ ವಿಕೋಪ ನಿರ್ವಹಣೆ ಕುರಿತ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದ ಅವರು, ಬರಗಾಲ ಎದುರಾಗುವ ಹಿನ್ನೆಲೆಯಲ್ಲಿ ಕಲ್ಯಾಣ ಕರ್ನಾಟಕ ಭಾಗದ ಜನರು ಉದ್ಯೋಗಕ್ಕಾಗಿ ಮಹಾನಗರಗಳಿಗೆ ಗುಳೆ ಹೋಗುವ ಪ್ರಮಾಣ ಹೆಚ್ಚಿದೆ. ಉದ್ಯೋಗ ಖಾತ್ರಿ ಯೋಜನೆಯೂ ಬದಲಾಗಿದೆ. ಲಭ್ಯ ಅನುದಾನ ಮತ್ತು ಯೋಜನೆಗಳನ್ನು ಬಳಸಿಕೊಂಡು ಜನರಿಗೆ, ತಮ್ಮ ಊರಿನಲ್ಲೆ ಉದ್ಯೋಗ ನೀಡಲು ಕ್ರಮವಹಿಸಬೇಕು. ಇದನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಸೂಚಿಸಿದರು.
ಬರಗಾಲ ಹಿನ್ನೆಲೆಯಲ್ಲಿ ಜನರ ಮೂಲಭೂತ ಅಗತ್ಯಗಳಾದ ಕುಡಿಯುವ ನೀರು, ಆಹಾರ, ಜೀವನೋಪಾಯಕ್ಕೆ ಅಗತ್ಯವಿರುವ ಉದ್ಯೋಗ, ಆರೋಗ್ಯ, ಜಾನುವಾರುಗಳಿಗೆ ಮೇವಿನ ಕೊರತೆಯಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
ಕಳೆದ ನಾಲ್ಕೈದು ದಿನಗಳಿಂದ ಕರಾವಳಿ ಮತ್ತು ಮಲೆನಾಡು ಪ್ರದೇಶಗಳಲ್ಲಿ ಉತ್ತಮ ಮಳೆಯಾಗುತ್ತಿದೆ. ಇದರಿಂದ ನದಿಗಳಿಗೆ ಒಂದಿಷ್ಟು ಪ್ರಮಾಣದಲ್ಲಿ ನೀರು ಹರಿದು ಬರುತ್ತಿರುವುದು ಆಶಾದಾಯಕ ಬೆಳವಣಿಗೆಯಾಗಿದೆ. ಆದರೆ ಬಯಲು ಸೀಮೆಯ ಜಿಲ್ಲೆಗಳ ಪರಿಸ್ಥಿತಿ ಸುಧಾರಣೆಯಾಗಿಲ್ಲ. ಹಾಗಾಗಿ ಮಳೆಯ ಕೊರತೆಯಿಂದ ಉಂಟಾಗಿರುವ ಸನ್ನಿವೇಶಗಳನ್ನು ಸಮರ್ಥವಾಗಿ ಎದುರಿಸಬೇಕಿದೆ ಎಂದರು.
ಸೂಪರ್ ಎಲ್ ನಿನೋ ಪರಿಣಾಮದಿಂದ ಭಾರತ ಸೇರಿದಂತೆ ಜಗತ್ತಿನ ಅನೇಕ ಕಡೆಗಳಲ್ಲಿ ಬರ, ಅಕಾಲಿಕ ಮಳೆ, ಭೂ ಕುಸಿತದಂತಹ ಸಮಸ್ಯೆಗಳು ಉಂಟಾಗಬಹುದು ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಅದೆ ರೀತಿಯ ವಾತಾವರಣ ಕಂಡು ಬರುತ್ತಿದೆ. ಈ ನಿಟ್ಟಿನಲ್ಲಿ ಮುನ್ನೆಚ್ಚರಿಕೆ ವಹಿಸಬೇಕಿದೆ ಎಂದರು.
ಮುಂದಿನ ದಿನಗಳಲ್ಲಿಯೂ ಮಳೆಯಾಗದಿದ್ದರೆ ಪರಿಸ್ಥಿತಿ ಇನ್ನಷ್ಟು ವಿಕೋಪಕ್ಕೆ ಹೋಗಬಹುದು. ಅದರ ಪರಿಣಾಮ ನಮ್ಮಲ್ಲೂ ಕಾಣಿಸಿಕೊಳ್ಳುತ್ತಿದೆ. ಇದನ್ನು ಎದುರಿಸಲು ನಾವು ಸಿದ್ಧತೆ ಮಾಡಿಕೊಳ್ಳಬೇಕಾಗಿದೆ ಎಂದರು.
ಕಲಬುರಗಿ ಕಂದಾಯ ವಿಭಾಗದ 26 ತಾಲೂಕುಗಳಲ್ಲಿ ಮಳೆ ಕೊರತೆಯಾಗಿದ್ದು, 11 ತಾಲೂಕುಗಳಲ್ಲಿ ಅತಿ ಕಡಿಮೆ ಮಳೆಯಾಗಿದೆ. ಒಟ್ಟಾರೆ 37 ತಾಲೂಕುಗಳು ಮಳೆ ಕೊರತೆಯಿಂದ ತೊಂದರೆಗೀಡಾಗಿವೆ. ಈವರೆಗೆ ಶೇ.38ರಷ್ಟು ಪ್ರದೇಶದಲ್ಲಿ ಮಾತ್ರ ಬೀಜ ಬಿತ್ತನೆಯಾಗಿದೆ. ಕಳೆದ ವರ್ಷ ಇದೆ ಅವಧಿಗೆ 19.41 ಲಕ್ಷ ಹೆಕ್ಟೇರ್‌ಗಳಷ್ಟು ಬಿತ್ತನೆಯಾಗಿತ್ತು. ಈ ವರ್ಷ 11.76 ಲಕ್ಷ ಹೆಕ್ಟೇರ್‌ಗಳಷ್ಟು ಮಾತ್ರ ಬೀಜ ಬಿತ್ತನೆಯಾಗಿದೆ. ಈ ಕುರಿತು ಗಂಭೀರ ಚಿಂತನೆ ಹಾಗೂ ಯೋಜನೆ ರೂಪಿಸಬೇಕು ಎಂದು ನಿರ್ದೇಶನ ನೀಡಿದರು.
ಅಚಾನಕ್ಕಾಗಿ ಮಳೆ ಬಿದ್ದಾಗ ಏಕಾಏಕಿ ಬಿತ್ತನೆ ಬೀಜ, ಗೊಬ್ಬರಗಳಿಗೆ ಬೇಡಿಕೆ ಹೆಚ್ಚಬಹುದು. ಆ ಸಂದರ್ಭಕ್ಕೆ ಅಗತ್ಯ ಬೀಜ – ಗೊಬ್ಬರ ಲಭ್ಯವಿರುವಂತೆ ನೋಡಿಕೊಳ್ಳಬೇಕು. ಇದನ್ನು ನಿರ್ವಹಿಸಲು ಬೇಕಾದ ಸಿದ್ಧತೆ ಮಾಡಿಕೊಳ್ಳಬೇಕು. ಈ ಕುರಿತು ಜಿಲ್ಲಾಧಿಕಾರಿಗಳು ಮತ್ತು ಕೃಷಿ ಇಲಾಖೆಯ ಅಧಿಕಾರಿಗಳು ತುರ್ತು ಗಮನ ಹರಿಸಬೇಕು ಎಂದು ಸೂಚನೆ ನೀಡಿದರು.
ಕಂದಾಯ ವಿಭಾಗದಲ್ಲಿ 47 ವಾರಗಳಿಗೆ ಸಾಕಾಗುವಷ್ಟು ಮೇವಿನ ಲಭ್ಯತೆ ಇದೆ ಎಂದು ಮಾಹಿತಿ ನೀಡಿದ್ದಿರಿ. ಈ ಕುರಿತು ಹಿರಿಯ ಅಧಿಕಾರಿಗಳು ಸ್ವತಃ ಪರಿಶೀಲಿಸಿ ಖಚಿತಪಡಿಸಿಕೊಳ್ಳಿ. ಭಾಲ್ಕಿ, ಹುಮನಾಬಾದ್, ಚಿಟಗುಪ್ಪ, ಹುಲಸೂರು, ಯಾದಗಿರಿ, ಗುರುಮಿಟಕಲ್ ತಾಲೂಕುಗಳಲ್ಲಿ 20 ರಿಂದ 24 ವಾರಗಳಿಗೆ ಆಗುವಷ್ಟು ಮಾತ್ರ ಮೇವಿದೆ. ಸಾಧ್ಯವಾದ ಕಡೆಗಳಲ್ಲಿ ತ್ವರಿತಗತಿಯಲ್ಲಿ ಮೇವು ಬ್ಯಾಂಕ್, ಗೋಶಾಲೆಗಳನ್ನು ತೆರೆಯಲು ಕ್ರಮ ವಹಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಮಳೆ ಮಾಪನ ಕೇಂದ್ರಗಳು ಸಮರ್ಪಕವಾಗಿ ಕಾರ್ಯ ನಿರ್ವಹಣೆಯಲ್ಲಿರುವಂತೆ ನೋಡಿಕೊಳ್ಳಬೇಕು. ಮಳೆ ಕೊರತೆ ಇರುವುದರಿಂದ ರೈತರಿಗೆ ಕಡಿಮೆ ಮಳೆ ನೀರಿನಲ್ಲಿ ಮತ್ತು ಅತ್ಯಂತ ಕಡಿಮೆ ಖರ್ಚಿನಲ್ಲಿ ಬೆಳೆಯಬಹುದಾದ ಬೆಳೆಗಳ ಬಗ್ಗೆ ಪ್ರೋತ್ಸಾಹಿಸಬೇಕು. ಈ ಬಗ್ಗೆ ಕೃಷಿ ಇಲಾಖೆಯು ರೈತಾಪಿವರ್ಗಕ್ಕೆ ಅಗತ್ಯ ತಿಳುವಳಿಕೆ ಮೂಡಿಸಬೇಕು ಎಂದರು.
ರಾಜ್ಯದ ಪ್ರತಿ ತಾಲೂಕಿಗೂ ಒಬ್ಬೊಬ್ಬರಂತೆ ಹಿರಿಯ ಕೆಎಎಸ್ ಅಧಿಕಾರಿಗಳನ್ನು ತಾಲೂಕು ಉಸ್ತುವಾರಿ ಅಧಿಕಾರಿಗಳೆಂದು ನೇಮಕ ಮಾಡಲಾಗಿದೆ. ಬರ ನಿರ್ವಹಣೆಗೆ ಅವರ ಸೇವೆಯನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು. ಈ ಬಗ್ಗೆ ಮುಖ್ಯ ಕಾರ್ಯದರ್ಶಿಯವರು ಗಮನ ಹರಿಸಬೇಕು ಎಂದರು.