ಸುದ್ದಿ ಸಂಗ್ರಹ ಯಾದಗಿರಿ
ನಿರ್ಮಾಣ ಹಂತದ ಎಕ್ಸ್ಪ್ರೆಸ್ ವೇಯಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಯುವಕರು ಸ್ಥಳದಲ್ಲೆ ದುರ್ಮರಣ ಹೊಂದಿರುವ ಘಟನೆ ಜಿಲ್ಲೆಯ ಶಹಾಪುರ ತಾಲೂಕಿನ ಇಬ್ರಾಹಿಂ ಡಿಬಿಎಲ್ ಕ್ಯಾಂಪ್ ಬಳಿ ನಡೆದಿದೆ. ಘಟನೆಯಲ್ಲಿ ಗುರುರಾಜ್ ಚವ್ಹಾಣ್(35), ರೆಡ್ಡಿ ರಾಠೋಡ್(33), ಗೋವಿಂದ ಚವ್ಹಾಣ್(28) ಮತ್ತು ಕುಮಾರ್ ರಾಠೋಡ್(26) ಎಂಬುವವರು ಮೃತಪಟ್ಟಿದ್ದಾರೆ. ಅಪಘಾತ ಸ್ಥಳಕ್ಕೆ ಎಸ್ಪಿ ಪೃಥ್ವಿಕ್ ಶಂಕರ್ ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಶಹಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಡೆದಿದ್ದೇನು ?
ಲಿಂಗೇರಿ ತಾಂಡಾದ ಓರ್ವ ಯುವಕ ಸೇರಿ ಮಲ್ಹಾರ್ ತಾಂಡಾದ ಮೂವರು ನಿವಾಸಿಗಳು ಕಲಬುರಗಿ ಜಿಲ್ಲೆಯ ಜೇವರ್ಗಿಯಿಂದ ಯಾದಗಿರಿ ಕಡೆಗೆ ಕಾರಿನಲ್ಲಿ ಹೊರಟಿದ್ದರು. ಈ ವೇಳೆ ನಿರ್ಮಾಣ ಹಂತದ ಚೆನ್ನೈ-ಸೂರತ್ ಎಕ್ಸ್ಪ್ರೆಸ್ ವೇನಲ್ಲಿ ವೇಗವಾಗಿ ಬಂದ ಕಾರು ರಸ್ತೆ ಪಕ್ಕದ ಗೋಡೆಗೆ ಡಿಕ್ಕಿ ಹೊಡೆದಿದೆ. ಭೀಕರ ಅಪಘಾತದಿಂದ ನಾಲ್ವರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಶುಕ್ರವಾರ ರಾತ್ರಿ 11.30ರ ಸುಮಾರಿಗೆ ಅಪಘಾತ ಸಂಭವಿಸಿದೆ.
ಆಯತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡೆದ ಬೈಕ್: ಸವಾರ ಸಾವು
ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಬೈಕ್ ಸವಾರ ಆಯತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡೆದು ತಲೆಗೆ ಗಂಭೀರವಾಗಿ ಗಾಯಗೊಂಡ ಪರಿಣಾಮ ಸ್ಥಳದಲ್ಲೇ ಮೃತಪಟ್ಟ ಘಟನೆ ಇತ್ತೀಚೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮಾದನಾಯಕನ ಹಳ್ಳಿಯಲ್ಲಿ ನಡೆದಿದೆ. ಬೆಂಗಳೂರಿನ ವಿಜಯನಗರ ನಿವಾಸಿ ಪ್ರವೀಣ್ (45) ಮೃತ ವ್ಯಕ್ತಿ. ನೆಲಮಂಗಲದಲ್ಲಿ ಖಾಸಗಿ ಕಂಪನಿಯಲ್ಲಿ ಮೇಲ್ವಿಚಾರಕರಾಗಿ ಕೆಲಸ ಮಾಡುತ್ತಿದ್ದರು.
ರಾತ್ರಿ ಎಂದಿನಂತೆ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಪ್ರವೀಣ್, ಈ ವೇಳೆ ಮಾದನಾಯಕನಹಳ್ಳಿಗೆ ಬರುತ್ತಿದ್ದಂತೆ ಬೈಕ್ ಡಿವೈಡರ್ಗೆ ಡಿಕ್ಕಿ ಹೊಡೆದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮನೆಗೆ ತೆರಳುವ ಭರದಲ್ಲಿ ಹೆಲ್ಮೆಟ್ ಧರಿಸದೆ ಚಾಲನೆ ಮಾಡಿದ್ದು, ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.
ಘಟನೆ ಸಂಬಂಧ ಚಿಕ್ಕಬಾಣಾವರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮೃತದೇಹವನ್ನು ನೆಲಮಂಗಲ ಶವಾಗಾರಕ್ಕೆ ರವಾನಿಸಿದ್ದಾರೆ. ಆದರೆ ಈ ಅಪಘಾತ ಬೈಕ್ ಸವಾರನ ದುಡುಕಿನಿಂದಲೇ ನಡೆದಿರುವುದು ಎನ್ನುವುದು ಗೊತ್ತಾಗಿದೆ.